ಹಾವೇರಿ: ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ. ನಾಳೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ, ನಾಳೆ ನಡೆಯುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹೆಚ್.ಕೆ ಪಾಟೀಲ್ ಸಾಥ್ ನೀಡಲಿದ್ದಾರೆ ಎಂದು ಹೇಳಿದರು.
ಬೆಳಗ್ಗೆ 11 ಗಂಟೆಗೆ ಕುಮಾರೇಶ್ವರ ಮಠದಿಂದ ನಾಮಪತ್ರ ಸಲ್ಲಿಕೆಗೆ ನಾಯಕರು ಹೋಗಲಿದ್ದಾರೆ. ಮಧ್ಯದಲ್ಲಿ ಬರುವ ಗ್ರಾಮದೇವಿ ಮತ್ತು ಕಾಶ್ಮೀರಿ ದರ್ಗಾಕ್ಕೆ ಭೇಟಿ ನೀಡಿ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಮಾಹಿತಿ ನೀಡಿದರು.
ನಾಳೆಯೇ ಜೆಡಿಎಸ್ ಅಭ್ಯರ್ಥಿ ನಾಮಪತ್ರ
ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಕೂಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ನಿಯಾಜ್ ಶೇಖ್ ನಾಮಪತ್ರ ಸಲ್ಲಿಕೆಗೆ ಜೆಡಿಎಸ್ ಮುಖಂಡರಾದ ಹೆಚ್‌ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಕೋನರೆಡ್ಡಿ ಸೇರಿದಂತೆ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಇದೇ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯದಿನವಾಗಿದ್ದು, ಟಿಕೆಟ್‌ಗಾಗಿ ಸಾಕಷ್ಟು ಗುದ್ದಾಟ ನಡೆಸಿರುವ ಬಿಜೆಪಿ ಅಭ್ಯರ್ಥಿಗಳು ಬಹಿರಂಗವಾಗಿ ಶುಕ್ರವಾರ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಗುರುವಾರ ಕಾನೂನುಬದ್ಧವಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಸಹ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಉಪ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ - ಸಚಿವ ಬಿಸಿ ಪಾಟೀಲ್