ಹಾವೇರಿ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆಗಳು ರಾಜ್ಯ ಬಂದ್‌ಗೆ ಜೂನ್ 22ರಂದು ಕರೆ ನೀಡಿದ್ದು, ಹಾವೇರಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಬೆಂಬಲ ಸೂಚಿಸಿದೆ. ಹಾವೇರಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆ ಜಿಲ್ಲಾಧ್ಯಕ್ಷ ರವಿ ಮೆಣಸಿನಕಾಯಿ ಮಾತನಾಡಿ, ವಿದ್ಯುತ್ ಶುಲ್ಕ ಹೆಚ್ಚಳದಿಂದಾಗಿ ಸಣ್ಣ ಕೈಗಾರಿಕೆ, ವ್ಯಾಪಾರಸ್ಥರು, ಜನಸಾಮಾನ್ಯರ ಮೇಲಾಗಿರುವ ಪರಿಣಾಮದ ಕುರಿತಾಗಿ ಸರ್ಕಾರ ಗಮನಕ್ಕೆ ತಂದಿದ್ದೆವು. ಸರ್ಕಾರ ಹಾಗೂ ನಾಲ್ಕು ವಿದ್ಯುತ್ ನಿಗಮದ ಅಧಿಕಾರಿಗಳೂ ಸ್ಪಂದಿಸಿಲ್ಲ. ವಿದ್ಯುತ್ ಬಿಲ್ ಏರಿಕೆ ಖಂಡಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಅವಿಭಾಜ್ಯ ಅಂಗವಾಗಿರುವ ಹಾವೇರಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸಹ ಬಂದ್ ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಜೂನ್ 22ರಂದು ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ವಿದ್ಯುತ್ ದರ ಏರಿಕೆ ಖಂಡಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ರವಿ ಮೆಣಸಿನಕಾಯಿ ಮಾಹಿತಿ ನೀಡಿದರು.
ಕೆಇಆರ್‌ಸಿ ಅವೈಜ್ಞಾನಿಕವಾಗಿ ಬೆಲೆ ಏರಿಕೆ ಮಾಡಿದೆ. ಹೆಸ್ಕಾಂ ಕೇಳಿರುವ ದರಕ್ಕಿಂತ ಕೆಇಆರ್‌ಸಿ ಅಧಿಕ ದರ ಏರಿಸಿದೆ. ಇದರಿಂದ ವಾಣಿಜ್ಯೋದ್ಯಮಿಗಳು ಸಣ್ಣ ವ್ಯಾಪಾರಿಗಳು ಸೇರಿದಂತೆ ವಿವಿಧ ಸ್ಥರದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ಕುರಿತಂತೆ ಸರ್ಕಾರದ ಎದುರು ಸಂಸ್ಥೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜೂನ್ 22ರಂದು ಕರ್ನಾಟಕ ಬಂದ್‌ಗೆ ಸ್ವಯಂ ಪ್ರೇರಿತ ಬಂದ್ ಮಾಡುವ ಮೂಲಕ ಬೆಂಬಲ ನೀಡುವಂತೆ ಮನವಿ ಮಾಡಿದರು.
ಬಂದ್ ಮಾಡದೇ ಇದ್ದರೆ ಬೆಲೆ ಏರಿಕೆ ಮಾಡಿರುವ ಸರ್ಕಾರದ ಕ್ರಮ ಸರಿ ಎಂಬ ಅಭಿಪ್ರಾಯ ಬರುತ್ತದೆ. ಹೀಗಾಗಿ ಜೂನ್ 22ರಂದು ಬಂದ್ ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರ ಈ ಕುರಿತಂತೆ ದರ ಇಳಿಕೆ ಮಾಡಬೇಕು ಇಲ್ಲದಿದ್ದರೆ ವಾಣಿಜ್ಯೋಧ್ಯಮ ಸಂಸ್ಥೆ ಪ್ರತಿಭಟನೆ ಮುಂದುವರಿಸಲಿದೆ ಎಂದು ರವಿ ಮೆಣಸಿನಕಾಯಿ ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜ್ಯದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆಗೆ ಅಕ್ಕಿ ನೀಡುತ್ತಿದೆ. ಆದರೆ ಬಡವರಿಗೆ ಊಟ ಮಾಡಲು ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್, ಹಿರೇಕೆರೂರು ಶಾಸಕ ಯು.ಬಿ. ಬಣಕಾರ್, ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಮತ್ತು ಮಹಿಳಾ ಜಿಲ್ಲಾಧ್ಯಕ್ಷೆ ಪ್ರೇಮಾ ಪಾಟೀಲ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: ಅಕ್ರಮ ಚಟುವಟಿಕೆಗಳಿಗೆ ಏಕಿಲ್ಲ ಕಡಿವಾಣ?: ಪೊಲೀಸ್ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕ್ಲಾಸ್