ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ. ಹೀಗಾಗಿ ಇಂದು ನಾಮಪತ್ರ ಸಲ್ಲಿಕೆ ಕಾರ್ಯ ಭರಾಟೆಯಿಂದ ನಡೆಯಲಿದೆ.
ಹಿರೇಕೆರೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅನರ್ಹ ಶಾಸಕ ಬಿ. ಸಿ. ಪಾಟೀಲ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಸರ್ವಜ್ಞ ವೃತ್ತದಿಂದ ತಹಶಿಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿರುವ ಕೌರವನಿಗೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದರಾದ ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ, ಶಾಸಕ ಕುಮಾರ ಬಂಗಾರಪ್ಪ, ಮಾಜಿ ಶಾಸಕ ಯು.ಬಿ. ಬಣಕಾರ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.
ಇನ್ನು, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ಹೆಚ್. ಬನ್ನಿಕೋಡ ಕೂಡಾ ಇಂದು ನಾಮಪತ್ರ ಸಲ್ಲಿಸಲಿದ್ದು, ಬೆಳಗ್ಗೆ 11ಕ್ಕೆ ಸರ್ವಜ್ಞ ವೃತ್ತದಿಂದ ತಹಶಿಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಮಾಜಿ ಸಚಿವರಾದ ಹೆಚ್. ಕೆ. ಪಾಟೀಲ್, ಮನೋಹರ್ ತಹಸೀಲ್ದಾರ, ರುದ್ರಪ್ಪ ಲಮಾಣಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ.
ಮತ್ತೊಂದೆಡೆ ಜೆಡಿಎಸ್ ಅಭ್ಯರ್ಥಿಯಾಗಿ ರಟ್ಟೀಹಳ್ಳಿಯ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಉಪಚುನಾವಣೆ ಅಖಾಡಕ್ಕಿಳಿದಿದ್ದು, ಅಚ್ಚರಿಗೆ ಕಾರಣವಾಗಿದೆ. ಇನ್ನು, ಕೆಜೆಪಿ ಅಭ್ಯರ್ಥಿಯಾಗಿ ಹರೀಶ ಇಂಗಳಗೊಂದಿ ಇಂದು ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.