ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧ ಸಾಬೀತಾದ ಹಿನ್ನೆಲೆ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ವಾಸ ಮತ್ತು 75 ಸಾವಿರ ರೂಪಾಯಿ ದಂಡ ವಿಧಿಸಿ ಹಾವೇರಿ ವಿಶೇಷ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವ್ಯಕ್ತಿ ಈ ಶಿಕ್ಷೆಗೆ ಗುರಿಯಾದವ.
ಆರೋಪಿ 2020ರ ಫೆಬ್ರವರಿ 19 ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಅರಣ್ಯವೊಂದಕ್ಕೆ ಕರೆದುಕೊಂಡು ಹೋಗಿದ್ದ. ಬಾಲಕಿ ತಾನು ನಿನ್ನ ಸಹೋದರನ ಮಗಳು ಎಂದು ಹೇಳಿದ್ದರೂ ಸಹ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ಈ ವಿಷಯ ಬೇರೆಯವರಿಗೆ ಹೇಳಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದ. ಈ ಕುರಿತಂತೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಶಿವಶಂಕರ ಆರ್.ಗಣಾಚಾರಿ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿ ಮೇಲೆ ಕಲಂ 363, 366, 376 (2) (ಎನ್), 376 (2) (ಎಫ್),506 ಭಾ.ದಂ.ಸಂ ಮತ್ತು ಕಲಂ: 4, 6, 10, 12 ಪೋಕ್ಸೋ ಕಾಯ್ದೆ-2012ರಡಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 75 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.
ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.50,000 ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಸರ್ಕಾರವು ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಎಸ್. ಪಾಟೀಲ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ಮೃತಪಟ್ಟ ವಿವಾಹಿತ ಪುತ್ರನ ಆಸ್ತಿಯಲ್ಲಿ ತಾಯಿಗೆ ಪಾಲಿಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು