ಹಾವೇರಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ.
ಇದರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿರುವ ರುದ್ರಪ್ಪ ಎನ್. ಬಾಳಿಕಾಯಿ ಅವರು ಪ್ರಶಂಸನೀಯ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ರುದ್ರಪ್ಪ ಅವರಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ಸಂದಿತ್ತು.
ಪ್ರಶಂಸನೀಯ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿರುವ ರುದ್ರಪ್ಪ ಬಾಳಿಕಾಯಿ ಅವರನ್ನು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.