ಹಾವೇರಿ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಹಾವೇರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ 25 ಸಾವಿರ ರೂ. ದಂಡ ಪಾವತಿಸುವಂತೆ ತೀರ್ಪು ನೀಡಿದೆ.
ಮಹಾರುದ್ರಗೌಡ ವೀರಭದ್ರಗೌಡ ಸಿದ್ದನಗೌಡ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಅಲ್ಲದೆ ಈ ಕುರಿತಂತೆ ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಕುರಿತಂತೆ ನೊಂದ ಮಹಿಳೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಗುರುವಾರ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸಿದ್ದಾರೋಡ ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.