ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷನಾಯಕ ಆರ್.ಅಶೋಕ್ ಜೋಡೆತ್ತುಗಳು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇದೇ ವೇಳೆ ಅವರು ಕಾಂಗ್ರೆಸ್ ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರ ಹೆಸರುಗಳನ್ನು ಪ್ರಸ್ತಾಪ ಮಾಡದೇ ಕಳ್ಳೆತ್ತುಗಳು ಇವೆ ಎಂದೂ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಕಳ್ಳೆತ್ತುಗಳು ಬಂಡವಾಳ ಏನು ಎಂಬುದು ಜನರಿಗೆ ದಿನ ಕಳೆದಂತೆ ಗೊತ್ತಾಗಲಾರಂಭಿಸಿದೆ. ಕಳ್ಳೆತ್ತುಗಳ ಜೊತೆ ನಮ್ಮ ಜೋಡೆತ್ತುಗಳ ಒಳ್ಳೆಯದಾಗಿ ಕೆಲಸ ಮಾಡಲಿವೆ ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿ ನಿಂತ ನೀರಾಗಿದೆ: ಪ್ರಸ್ತುತ ರಾಜ್ಯದ ಅಭಿವೃದ್ಧಿ ನಿಂತ ನೀರಾಗಿದೆ. ಶಾಸಕರಿಗೆ ತಮ್ಮ ಕ್ಷೇತ್ರಗಳಲ್ಲಿ ಒಂದು ರೂಪಾಯಿ ಅನುದಾನ ತರಲು ಆಗುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಒಂದು ರೂಪಾಯಿ ಅನುದಾನ ಕೊಡಲೂ ಆಗುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸೂಪರ್ ಸಿಎಂ ಯತೀಂದ್ರ ಸೂಚಿಸಿದ ಹೆಸರು ವರ್ಗಾವಣೆ ಪಟ್ಟಿಯಲ್ಲಿದೆ ಎಂದು ಆರೋಪಿಸಿದ ರಾಮುಲು ಇವುಗಳ ಬಗ್ಗೆ ಸ್ಫಷ್ಟೀಕರಣ ನೀಡಬೇಕು. ಮುಂದಿನ ದಿನಗಳಲ್ಲಿ ಜನರು ಇವರನ್ನ ಯಾವ ರೀತಿ ತಿರಸ್ಕಾರ ಮಾಡಬೇಕು ಆ ರೀತಿ ತಿರಸ್ಕಾರ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷನಾಯಕ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ ಅದನ್ನು ಸರಿಪಡಿಸಿಕೊಂಡು ಹೋಗುತ್ತೇವೆ. ಉತ್ತರ ಕರ್ನಾಟಕದ ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದರು. ಮುಂದೆ ಮತ್ತೆ ಉತ್ತರ ಕರ್ನಾಟಕದ ಮುಖಂಡರಿಗೆ ಸ್ಥಾನ ಮಾನ ನೀಡಲಾಗುತ್ತದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣಿಹಾಕಲಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಗನಾಗಿ ಹುಟ್ಟಿದ್ದೇ ತಪ್ಪಾ ಎಂದು ಪ್ರಶ್ನಿಸಿದ ಅವರು, ವಿಜಯೇಂದ್ರ ಒಂದೇ ಬಾರಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಬಂದು ಕುಳಿತಿಲ್ಲ. ಹಂತ ಹಂತವಾಗಿ ಈ ಸ್ಥಾನಕ್ಕೆ ತಲುಪ್ಪಿದ್ದಾರೆ ಎಂದು ಹೇಳಿದರು.
ಬಳಿಕ ಶಾಸಕ ಬಸನಗೌಡ ಪಾಟೀಲ್ ಅಸಮಾಧಾನದ ಬಗ್ಗೆ ಮಾತನಾಡಿದ ಅವರು ಯತ್ನಾಳ್ ಹಿರಿಯ ನಾಯಕರು. ಸಾಕಷ್ಟ ಹೋರಾಟ ಮಾಡಿ ಮೇಲಕ್ಕೆ ಬಂದಿದ್ದಾರೆ. ಅವರಿಗೆ ಅವರದ್ದೇ ವರ್ಚಸ್ಸಿದೆ. ಇವತ್ತಿನ ಪರಿಸ್ಥಿತಿಯಲ್ಲಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇವೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ ಎಂದರು. ಜನಾರ್ದನ ರೆಡ್ಡಿ ಬಿಜೆಪಿಗೆ ಮರಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಈ ಬಗ್ಗೆ ತಮಗೆ ಸರಿಯಾದ ಮಾಹಿತಿ ಇಲ್ಲ ಎಂದರು.
ಈ ಬಾರಿ 25ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ: ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿ 25 ಸ್ಥಾನ ಗೆದ್ದಿದ್ದೆವು. ಈ ಬಾರಿ 25ಕ್ಕಿಂತ ಹೆಚ್ಚಿನ ಸ್ಥಾನದಲ್ಲಿ ಗೆಲ್ಲಲ್ಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ, ಅವರಿಗೆ ಶುಭ ಕೋರುತ್ತೇನೆ: ಡಿ ಕೆ ಶಿವಕುಮಾರ್