ಹಾವೇರಿ: ಕುರುಬ ಜನಾಂಗಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಬ್ಯಾಡಗಿ ತಾಲೂಕಿನ ಕಾಗಿನೆಲೆಯಿಂದ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಶ್ರೀಗಳ ನೇತೃತ್ವದಲ್ಲಿ ಶುಕ್ರವಾರ ಪಾದಯಾತ್ರೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕಾಗಿನೆಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಮುಂಜಾನೆಯಿಂದ ಆರಂಭವಾಗುವ ಕಾರ್ಯಕ್ರಮ ಮಧ್ಯಾಹ್ನ ಮೂರು ಗಂಟೆಯವರೆಗೆ ನಡೆಯಲಿದೆ. ನಂತರ ಶ್ರೀಗಳು 10 ಕಿ.ಮೀ ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಮುಂಜಾನೆ ನಡೆಯುವ ಕಾರ್ಯಕ್ರಮಕ್ಕೆ ಕಾಗಿನೆಲೆಯಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್.ಶಂಕರ್, ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ವಿವಿಧ ಮುಖಂಡರು ಹಾಗೂ ರಾಜ್ಯದ ವಿವಿಧಡೆಯಿರುವ ಕನಕ ಪೀಠಗಳ ಶ್ರೀಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಗಿನೆಲೆಯಿಂದ ಆರಂಭವಾಗುವ ಪಾದಯಾತ್ರೆಯು, ಬೆಂಗಳೂರಿನವರೆಗೆ ನಡೆಯಲಿದೆ. ಬೆಂಗಳೂರಿನಲ್ಲಿ ಫೆಬ್ರವರಿ 7ರಂದು ಕುರುಬರ ಜಾಗೃತಿ ಸಮಾವೇಶದ ನಡೆಯುವ ಮೂಲಕ ಪಾದಯಾತ್ರೆ ಮುಕ್ತಾಯವಾಗಲಿದೆ.