ಕಲಬುರಗಿ: ನಗರದ ಡಿ.ಎ.ಆರ್. ಮೈದಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಸಲಾಯಿತು. ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಧ್ವಜಾರೋಹಣ ನೆರವೇರಿಸಿದರು.
ನಂತರ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೆರೆ ಮತ್ತು ಬರ ಎರಡೂ ಸೃಷ್ಟಿಯಾಗಿವೆ. ಪ್ರವಾಹವನ್ನು ಸಮರ್ಥವಾಗಿ ನಿಭಾಯಿಸಿಲಾಗಿದ್ದು, ಜಿಲ್ಲೆಯಲ್ಲಿ ಈ ಬಾರಿ 241 ಮಿಲೀ ಮೀಟರ್ ಮಳೆಯಾಗಿದೆ. 7.50 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ 6.76 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಇದರಲ್ಲಿ 4.36 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತ 1 ಲಕ್ಷ ಹೆಕ್ಟೇರ್ ಪ್ರೇದೆಶದಲ್ಲಿ ಬಿತ್ತನೆ ಪ್ರದೇಶ ಹೆಚ್ಚಳವಾಗಿದೆ ಎಂದರು. ಪ್ರವಾಹದಿಂದ ಮೂರು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ವಿತರಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್.ಎಸ್.ಎಲ್.ಸಿ ಪಿಯುಸಿ,ಮತ್ತು ಪದವಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಡಾ. ಉಮೇಶ್ ಜಾಧವ್, ಪ್ರಾದೇಶಿಕ ಆಯುಕ್ತ ಸುಭೋದ್ ಯಾಧವ್, ಎಸ್ಪಿ ಯಡಾ ಮಾರ್ಟಿನ್, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದರು.