ಕಲಬುರಗಿ: ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಎಐಡಿವೈಒ ಜಿಲ್ಲಾಧ್ಯಕ್ಷ ನಿಂಗಣ್ಣ ಜಂಬಗಿ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಅಸಡ್ಡೆ ತೋರುತ್ತಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರಿದ್ದಾರೆ. 10 ಮತ್ತು 12ನೇ ತರಗತಿಗಳಿಗೆ ಪಾಠ ಮಾಡಲು 22,150 ಅತಿಥಿ ಶಿಕ್ಷಕರಿದ್ದಾರೆ. 20 ವರ್ಷಗಳಿಂದ ದುಡಿಯುತ್ತಾ ಬಂದರೂ ಕಾಯಂ ಆಗುತ್ತಿಲ್ಲ. ಗೌರವ ಧನವನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಕೂಡಲೇ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಕಾಯಂ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 25ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡವುದಾಗಿ ತಿಳಿಸಿದ್ದಾರೆ.