ಕಲಬುರಗಿ: ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಮಿನಿ ಟ್ರಕ್ ಚಾಲಕನೊಬ್ಬನ ಮೇಲೆ ಸಂಚಾರಿ ಪೊಲೀಸ್ ಪೇದೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಇದೀಗ ಅಂಥದ್ದೇ ಒಂದು ಘಟನೆ ಕಲಬುರಗಿಯಲ್ಲೂ ನಡೆದಿದೆ.
ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಸಂಚಾರಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿಯೇ ವಾಹನ ಸವಾರರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿ ಭಾರತಿ ಧನ್ನಿ ಅವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ನಡೆದುಕೊಂಡು, ಅವಾಚ್ಯ ಪದಗಳನ್ನು ಬಳಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಇಂಥವರನ್ನೆಲ್ಲ ಹೇಗೆ ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಅವರನ್ನು ಕೆಲಸದಿಂದ ವಜಾಗೊಳಿಸಿ ಮನೆಗೆ ಕಳುಹಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ಮಹಿಳಾ ಅಧಿಕಾರಿಯಾಗಿ ಮಹಿಳಾ ಹಾಗೂ ಪುರುಷ ವಾಹನ ಸವಾರರ ವಿರುದ್ಧ ಬಾಯಿ ಹರಿಬಿಟ್ಟಿರುವುದು ಸಾರ್ವಜನಿಕರ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ನಿಯಮ ಉಲ್ಲಂಘಿಸಿದ್ದರೆ ದಂಡ ಹಾಕಲಿ. ಆದ್ರೆ, ಅವ್ಯಾಚ ಶಬ್ದಗಳಿಂದ ನಿಂದಿಸುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.