ಕಲಬುರಗಿ: ಚಿಂಚೋಳಿಯ ಯಾಕಾಪುರ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಕಲಬುರ್ಗಿಯಲ್ಲಿ ಎಬಿವಿಪಿ ಹಾಗೂ ಎಐಎಮ್ಎಸ್ಎಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಘಟನೆಯನ್ನು ತೀವ್ರವಾಗಿ ಖಂಡಿಸಿದರು. ದೇಶಾದ್ಯಂತ ಪದೇ ಪದೆ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಆದರೆ, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ನಂತರ ಮಾತನಾಡಿದ ಎಬಿವಿಪಿ ಕಾರ್ಯಕರ್ತೆ ಮಂಜುಳಾ ಕಟ್ಟಿಮನಿ ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.