ಕಲಬುರಗಿ: ಫೆಬ್ರವರಿಯಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಪರ ಸಂಘಟನೆಗಳನ್ನು ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿ ಕನ್ನಡ ಭವನದ ಎದುರು ಕಲ್ಯಾಣ ಕರ್ನಾಟಕದ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲ್ಯಾಣ ಕರ್ನಾಟಕದ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ದೀಪ ಹಿಡಿದುಕೊಂಡು ಪ್ರತಿಭಟಿಸಿದ ಕಾರ್ಯಕರ್ತರು, ಕನ್ನಡ ಸಾಹಿತ್ಯ ಪರಿಷತ್ ವಿರುದ್ಧ ಘೋಷಣೆ ಕೂಗಿದರು. ಕನ್ನಡ ಸಮ್ಮೇಳನದಲ್ಲಿ ಕನ್ನಡ ಸಂಘಟನೆಗಳ ಕಡೆಗಣನೆ ಮಾಡಿ, ಕನ್ನಡಿಗರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕವಿಗೋಷ್ಠಿಗೆ ಹೆಸರು ಹಾಕಲು ಹಣ ಪಡೆಯುತ್ತಿರುವುದಾಗಿಯೂ ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ. ಕನ್ನಡ ಸಮ್ಮೇಳನ ರಾಜಕೀಯ ಸಮ್ಮೇಳನವಾಗುತ್ತಿದೆ ಎಂದು ಕಿಡಿಕಾರಿದರು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.