ಕಲಬುರಗಿ : ಬಿಜೆಪಿ ಹಿಂಬಾಗಿಲು ರಾಜಕೀಯ ಮಾಡುತ್ತಿದೆ. ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮಾಡಲಾಗಿದೆ ಎಂದು ವಿಧಾನಸಭೆ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕುಗ್ಗಿಸುವ ಕಾರಣ ರಾಜಕೀಯ ದುರುದ್ದೇಶದಿಂದ ಬಿಜೆಪಿಯವರು ಡಿಕೆಶಿ ಬ್ರದರ್ಸ್‌ನ ಟಾರ್ಗೆಟ್ ಮಾಡಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡಿದ್ರೆ ಸಿಬಿಐ, ಇಡಿ ಮತ್ತು ಐಟಿ ದಾಳಿ ಮಾಡುತ್ತಾರೆ. ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದರು.
ದಾಳಿಗೆ ಅಕ್ರಮ ಆಸ್ತಿ ಸಂಪಾದನೆ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ, ಬಿಜೆಪಿ ಪಕ್ಷದಲ್ಲಿ ಎಷ್ಟು ಜನ ಅಕ್ರಮ ಆಸ್ತಿ ಮಾಡಿದವರಿಲ್ಲ. ಈವರೆಗೆ ಯಾರೊಬ್ಬ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಇದೊಂದು ಬಿಜೆಪಿ ಪ್ರಾಯೋಜಿತ ದಾಳಿ. ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ದಾಳಿ ಮಾಡಲಾಗಿದೆ. ದ್ವೇಷದ ರಾಜಕಾರಣ ಮಾಡೋದು ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.