ಕಲಬುರಗಿ/ಬೀದರ್: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಮುಷ್ಕರ ಬೆಂಬಲಿಸಿ ಕಲಬುರಗಿಯಲ್ಲಿ ಎನ್ಐಟಿಯುಸಿ ಕಾರ್ಯಕರ್ತರು ಧರಣಿ ಹಮ್ಮಿಕೊಂಡಿದ್ದರು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾರ್ಮಿಕರನ್ನು ಕಡೆಗಣಿಸುತ್ತಿರುವುದಲ್ಲದೆ, ಸಿಎಎ, ಎನ್ಆರ್ಸಿ ಜಾರಿಗೆ ತರುವ ಮೂಲಕ ಜನ ವಿರೋಧಿ ಅಸಂವಿಧಾನಿಕ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ಕೂಡಲೇ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಕೈ ಬಿಟ್ಟು, ಜನಪರ ಆಡಳಿತ ನಡೆಸಬೇಕು ಹಾಗೂ ಕಾರ್ಮಿಕರ ವೇತನ ಹಾಗೂ ಪಿಂಚಣಿ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಗಡಿ ಜಿಲ್ಲೆ ಬೀದರ್ನಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಅಸಂಘಟಿತ ಕಾರ್ಮಿಕ ಸಂಘಟನೆಗಳು, ದೇಶದಲ್ಲಿರುವ ಎಲ್ಲಾ ಹೊರ ಗುತ್ತಿಗೆ ಆಧಾರದ ನೌಕರರನ್ನು ಕಾಯಂ ಮಾಡುವುದು, ಸರ್ಕಾರದ ಅಧೀನ ಸಂಸ್ಥೆಗಳ ಖಾಸಗೀಕರಣದಿಂದ ಬೀದಿಪಾಲಾದ ನೌಕರರಿಗೆ ನ್ಯಾಯ ಕೊಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿದರು.