ಕಲಬುರಗಿ: ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎರಡು ದಿನಗಳ ಕಾಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಟಿ ನಡೆಸಿದ ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ನಾಳೆ ಮತ್ತು ನಾಡಿದ್ದು ಎರಡು ದಿನ ಕಲ್ಯಾಣ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದರು.
ನಾಳೆ ರಾಯಚೂರು ಮತ್ತು ಯಾದಗಿರಿಗೆ ಆಗಮಿಸಲಿರುವ ರಾಜ್ಯಾಧ್ಯಕ್ಷರು, ಎರಡು ಜಿಲ್ಲೆಯ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ನಾಳೆ ಸಂಜೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ನಾಡಿದ್ದು ಕಲಬುರಗಿ ಬಿಜೆಪಿ ಕಚೇರಿಯಲ್ಲಿ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಕಲಬುರಗಿ ಗ್ರಾಮಿಣ ಮತಕ್ಷೇತ್ರದ ಕಮಲಾಪುರದಲ್ಲಿ ಸಭೆ ನಡೆಸಿ ಪಕ್ಷ ಸಂಘಟನೆ ಹಾಗೂ ಈ ಭಾಗದ ಅಭಿವೃದ್ಧಿ ಕುರಿತು ಚರ್ಚಿಸಲಿದ್ದಾರೆ. ಬಳಿಕ ಬೀದರ್ ಕಡೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದರು.