ಕಲಬುರಗಿ: ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕೇವಲ ನಾಟಕವಾಗಿದ್ದು, ಕೋಟ್ಯಾಂತರ ರೂಪಾಯಿ ಅಪವ್ಯಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಗ್ರಾಮ ವಾಸ್ತವ್ಯದ ನೆಪದಲ್ಲಿ ಕುಮಾರಸ್ವಾಮಿ ಹೈಟೆಕ್ ವಾಸ್ತವ್ಯ ಮಾಡುತ್ತಿದ್ದಾರೆ. ಹೇರೂರ ಗ್ರಾಮದಲ್ಲಿ ಸಿಎಂ ವಾಸ್ತವ್ಯ ರದ್ದಾಗಿದ್ದು, ಅದಕ್ಕಾಗಿ 50 ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿ ಪೋಲು ಮಾಡಲಾಗಿದೆ. ಜನಸಾಮಾನ್ಯರ ತೆರಿಗೆ ಹಣವನ್ನು ಗ್ರಾಮ ವಾಸ್ತವ್ಯದ ನೆಪದಲ್ಲಿ ದುಂದು ವೆಚ್ಚ ಮಾಡಲಾಗುತ್ತಿದೆ. ಹೀಗಾಗಿ ಕೂಡಲೇ ಗ್ರಾಮ ವಾಸ್ತವ್ಯ ನಾಟಕ ಕೈಬಿಡಬೇಕು ಎಂದು ಆಗ್ರಹಿಸಿದರು.
ಅಷ್ಟೇಅಲ್ಲ ಮುಂದಿನ ದಿನಗಳಲ್ಲಿ ಕಲಬುರಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲು ಬಂದರೆ ಅದರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.