ಕಲಬುರಗಿ: ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ತವರು ಜಿಲ್ಲೆ ಕಲಬುರಗಿ ನಗರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಖರ್ಗೆ ಅವರು ಬಂದಿಳಿದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ವಿಮಾನ ನಿಲ್ದಾಣದಲ್ಲಿ ಖರ್ಗೆ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಬಳಿಕ ರಿಂಗ್ ರಸ್ತೆ ಮೂಲಕ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಹತ್ತಿರ ಆಗಮಿಸಿದ ಖರ್ಗೆ ಅವರಿಗೆ, ಜೆಸಿಬಿ ಮೂಲಕ ಹೂಮಳೆ ಸುರಿಸಿ ಅಭಿಮಾನಿಗಳು ಭವ್ಯವಾದ ಸ್ವಾಗತ ಕೋರಿದರು. ಇಲ್ಲಿಂದ ಎನ್‌ವಿ ಮೈದಾನದವರೆಗೆ ಭವ್ಯವಾದ ಮೆರವಣಿಗೆ ನಡೆಯಲಿದೆ. ಬಳಿಕ ಕಲ್ಯಾಣ ಕ್ರಾಂತಿ ಸಮಾವೇಶ ನಡೆಯಲಿದೆ.
ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಕೆಎಚ್ ಮುನಿಯಪ್ಪ, ಯುಟಿ ಖಾದರ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕರು ನಾಯಕರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಇಂದು ಕಲಬುರಗಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿ.. ಅದ್ಧೂರಿ ಮೆರವಣಿಗೆಗೆ ಕಾರ್ಯಕರ್ತರು ರೆಡಿ!