ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ಗಂಜ್ ಪ್ರದೇಶದ ಭಾರತ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿ ಮಣಿಕಂಠ ರಾಠೋಡರನ್ನು ಚಿತ್ತಾಪುರ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.
ಚಿತ್ತಾಪುರ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಮಣಿಕಂಠ ರಾಠೋಡ್, ಪೊಲೀಸರು ಬಂಧಿಸುವ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಕಲಬುರಗಿಯ ಲಾಕಪ್‌ಡೆತ್, ಜೇವರ್ಗಿ ಬಳಿ ಪೊಲೀಸ್ ಫೈರಿಂಗ್ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದಕ್ಕೆ ನನ್ನನ್ನು ಬಂಧಿಸಲಾಗುತ್ತಿದೆ. ಬೆಳ್ಳಂಬೆಳಗ್ಗೆ ಮನೆಗೆ ಬಂದು ನಿದ್ರಾವಸ್ಥೆಯಲ್ಲಿರುವ ನನ್ನನ್ನು ಬಂಧಿಸಲು ಮುಂದಾಗಿದ್ದಾರೆ. ಅವರ ಬಳಿ ಎಫ್‌ಐಆರ್, ಅರೆಸ್ಟ್ ವಾರೆಂಟ್ ಇಲ್ಲ. ಆದರೂ ಬಂಧನಕ್ಕೆ ಮುಂದಾಗಿದ್ದಾರೆ. ಎಸ್‌ಪಿ ಇಶಾ ಪಂತ್ ಅವರಿಗೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸದೆ ಪೊಲೀಸರೊಂದಿಗೆ ತೆರಳುವಂತೆ ಹೇಳಿ ಫೋನ್ ಕಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ರವಾನಿಸಿದ್ದಕ್ಕೆ ವಶಕ್ಕೆ ಪಡೆಯಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಒಂದು ತಿಂಗಳ ಹಿಂದೆ ಚಿತ್ತಾಪುರ ತಾಲೂಕಿನ ಕಲಗುರ್ತಿಯ ವ್ಯಕ್ತಿಯ ಸಾವಿನ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹಂಚಿಕೊಂಡಿದ್ದಾರೆ. ಈ ಸಂಬಂಧ ಚಿತ್ತಾಪುರ ಠಾಣೆಯಲ್ಲಿ ಐಪಿಸಿ ಸೆಕ್ಸನ್ 153A, 505/1B ಅನ್ವಯ ಕೇಸ್ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಸದ ಉಮೇಶ್ ಜಾಧವ್ ಸೇರಿದಂತೆ ಬಿಜೆಪಿ ಮುಖಂಡರು ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಗೆ ದೌಡಾಯಿಸಿ ಎಸ್ಪಿ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಾಧವ್, ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡುವುದನ್ನು ಬಿಡಬೇಕು. ಬಿಜೆಪಿ ನಾಡಿನ ಅಭಿವೃದ್ಧಿಗೆ ಶ್ರಮಿಸಿದೆ. ಅದರಂತೆ ತಾವು ಕೂಡಾ ಜನಪರ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಬೇಕು. ದ್ವೇಷ ರಾಜಕಾರಣ ಮಾಡುವುದರಿಂದ ಯಾರಿಗೂ ಒಳ್ಳೆಯದಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಕೋಲಾರ: ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ