ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿದ್ದು, ನಿನ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಲ್ಯಾಣ ಕರ್ನಾಟಕ ಭಾಗವಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಸೇರಿದಂತೆ ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಕಾರಣ, ಅಪೌಷ್ಟಿಕತೆ ಹೋಗಲಾಡಿಸಲು ನಿನ್ನೆಯಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಲಬುರಗಿ ನಗರದ ಎಂಬಿ ನಗರ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿಡಿಪಿಐ ಅಶೋಕ್ ಭಜಂತ್ರಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವುದರ ಮೂಲಕ ಮಿಡ್ ಡೇ ಮಿಲ್ ಸ್ಕಿಮ್‌ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮಧ್ಯಾಹ್ನದ ಉಪಹಾರ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ.
ಇದನ್ನೂ ಓದಿ: ಕಾಶ್ಮೀರದ ಅನಾಥ ಮಕ್ಕಳ 'ಮಾರಾಟ'?: ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು
ವಾರದಲ್ಲಿ 3 ದಿನ ಸೋಮವಾರ, ಬುಧವಾರ ಮತ್ತು ಶನಿವಾರದಂದು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲಾಗುತ್ತಿದ್ದು, ಉಳಿದ ದಿನಗಳಲ್ಲಿ ಶನಿವಾರ ಹೊರೆತು ಪಡಿಸಿ ಹಾಲು ನೀಡಲಾಗುತ್ತದೆ. ಈ ಹಿಂದೆ ಕೂಡ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಹತ್ತು ಹಲವು ಯೋಜನೆಗಳನ್ನ ತರಲಾಗಿತ್ತು. ಆದರೆ ಆ ಯೋಜನೆಗಳು ಮಕ್ಕಳಿಗೆ ತಲುಪದೆ ಅಧಿಕಾರಿಗಳ ಹೊಟ್ಟೆ ಸೇರಿದ್ದರಿಂದ ಅಪೌಷ್ಟಿಕತೆಗೆ ಹೋಗಲಾಡಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮುಂಬರುವ ದಿನಗಳಲ್ಲಿ ಈ ಯೋಜನೆಗೆ ಸಹ ಗ್ರಹಣ ಹಿಡಿಯದಿರಲಿ ಎನ್ನುವುದು ಜನರ ಆಶಯ.