ಕಲಬುರಗಿ : ತೊಗರಿ ಬೆಂಬಲ ಬೆಲೆ ಹೆಚ್ಚಳ, ತೊಗರಿ ಖರೀದಿ ಪ್ರಕ್ರಿಯೆ ಕೂಡಲೇ ಆರಂಭಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಸದ ಉಮೇಶ್ ಜಾಧವ್ ಕಚೇರಿ ಎದುರು ಧರಣಿ ಮಾಡುತ್ತಿದ್ದ ರೈತರು ಮತ್ತು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ ಮತ್ತಿತರ ರೈತ ಸಂಘಟನೆಗಳ ನೇತೃತ್ವದಲ್ಲಿ ಕಳೆದ 9 ದಿನಗಳಿಂದ ಸಂಸದರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಆದರೆ ಏಕಾಏಕಿ ಟೆಂಟ್ ಬಳಿ ಬಂದ ಪೊಲೀಸರು ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಎಐಕೆಎಸ್ ಮುಖಂಡ ಮೌಲಾ ಮುಲ್ಲಾ, ಸಿಪಿಐಎಂ ಮುಖಂಡ ಶರಣಬಸಪ್ಪ ಮಮಶೆಟ್ಟಿ, ಅಶೋಕ್ ಮ್ಯಾಗೇರಿ ಸೇರಿದಂತೆ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಪೊಲೀಸರ ಕ್ರಮಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದರೂ ಏಕೆ ಬಂಧಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಬಂಧಿತರನ್ನು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.