ಕಲಬುರಗಿ: ಜಿಲ್ಲೆಯಲ್ಲಿ ಸೋಯಾಬೀನ್ ಸೇರಿದಂತೆ ಕೆಲ ಬಿತ್ತನೆ ಬೀಜಗಳ ಕೊರತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರ್ಯಾಯ ಬೆಳೆ ಬೆಳೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ರೈತರಲ್ಲಿ ಮನವಿ ಮಾಡಿದರು. ನಗರದ ಗುಲ್ಬರ್ಗಾ ವಿಶ್ವವಿದ್ಯಾಲದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈಗ ಅಭಾವವಾಗಿರುವ ಸೋಯಾಬೀನ್ ಮುಂತಾದ ಬಿತ್ತನೆ ಬೀಜಕ್ಕೆ ಪರ್ಯಾಯವಾಗಿ ಬೇರೆ ಬೀಜಗಳನ್ನು ಬಿತ್ತನೆ ಮಾಡಲು 10 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಈ ಕುರಿತು ವಾಹನಗಳ ಮೂಲಕ ಹಳ್ಳಿಗಳಿಗೆ ತೆರಳಿ ಮನೆ-ಮನೆಗಳಿಗೆ ಪ್ರಚಾರ ಮಾಡಬೇಕು. ಸೋಯಾಬೀನ್ ಬೆಳೆಗಳಿಗೆ ಪರ್ಯಾಯ ಬೆಳೆ ಬೆಳೆಯುವಂತೆ ರೈತರಿಗೆ ತಿಳಿ ಹೇಳಿ ಅವರ ಮನವೊಲಿಸಬೇಕು ಎಂದು ಸಚಿವರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಬಳಕೆ ಮಾಡದ ಅಧಿಕಾರಿಗಳನ್ನು ಜೈಲಿಗೆ ಕಳಿಸಿ:
ಇದೇ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಶಾಸಕ ಪ್ರಿಯಾಂಕ್ ಖರ್ಗೆ ಎಸ್ ಸಿ ಪಿ-ಟಿ ಎಸ್ ಪಿ ಯೋಜನೆಯಡಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಆಯಾ ವರ್ಷದಲ್ಲಿಯೇ ಬಳಕೆ ಮಾಡದ ಅಧಿಕಾರಿಗಳನ್ನು ಜೈಲಿಗೆ ಕಳಿಸಿ ಎಂದು ಆಗ್ರಹಿಸಿದರು.
ಕಳೆದ ಮೂರು ವರ್ಷದ ಹಿಂದೆ ಮಾನ್ಯ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಿ ಬಿಡುಗಡೆಯಾದ ಎಸ್ ಸಿ ಪಿ-ಟಿ ಎಸ್ ಪಿ ಯೋಜನೆಯಡಿಯಲ್ಲಿ ಬಿಡುಗಡೆಯಾದ ಅನುದಾನ ಬಳಕೆ ಮಾಡದೇ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದ ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಕಾನೂನು ಪ್ರಕಾರ ಆಯಾ ವರ್ಷದ ಬಿಡುಗಡೆಯಾದ ಅನುದಾನ ಬಳಕೆ ಮಾಡದ ಅಧಿಕಾರಿಗಳನ್ನು ಜೈಲಿಗೆ ಕಳಿಸಲು ಅವಕಾಶವಿದೆ. ಒಂದಿಬ್ಬರು ಅಧಿಕಾರಿಗಳನ್ನು ಜೈಲಿಗೆ ಕಳಿಸಿ ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಿಸಿ ಎಂದು ಒತ್ತಾಯ ಮಾಡಿದ್ದಾರೆ.
ಮುಲ್ಲಾಮಾರಿ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು ಈ ಹಿಂದಿನ ಕೆಡಿಪಿ ಸಭೆ ನಡೆಸಿದ್ದ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರ ಈ ಕುರಿತು 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದರು. ಈ ಕುರಿತು ವರದಿ ಏನಾಯ್ತು? ಜೊತೆಗೆ ಈ ಮುನ್ನ ವಿಧಾನಸಭೆಯ ಅಧಿವೇಶನದಲ್ಲಿ ನಾನು ಹಾಗೂ ಚಿಂಚೋಳಿ ಶಾಸಕರಾದ ಅವಿನಾಶ್ ಜಾಧವ್ ಅವರು ಪ್ರಶ್ನಿಸಿದಾಗ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವರು ಉತ್ತರಿಸಿದ್ದರು. ಆದರೂ ಸದರಿ ತನಿಖೆ ಏನಾಯ್ತಯ? ಎಂದು ಪ್ರಿಯಾಂಕ್ ಖರ್ಗೆ ಸಭೆಯಲ್ಲಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಜಗತ್ಪ್ರಸಿದ್ಧ ಹಂಪಿಯ ಸ್ಮಾರಕಗಳು ಇಂದಿನಿಂದ ಪ್ರವಾಸಿಗರಿಗೆ ಮುಕ್ತ