ಕಲಬುರಗಿ: ನಗರದಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಗ್ಯಾಂಗ್ವೊಂದು ಪತ್ತೆಯಾಗಿದೆ. ಡಿಎಚ್ಓ ರಾಜಶೇಖರ ಮಾಲಿ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಮನೆಯೊಂದರ ಬಾಡಿಗೆ ಕೋಣೆಯಲ್ಲಿದ್ದ ಭ್ರೂಣಲಿಂಗ ಪರೀಕ್ಷೆ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರದ ಉಸ್ಮಾನಬಾದ್ ಆರೋಗ್ಯ ಇಲಾಖೆ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ನಿನ್ನೆ ಸಂಜೆ ದಾಳಿ ನಡೆಸಿರೋ ಕಲಬುರಗಿ ಆರೋಗ್ಯ ಇಲಾಖೆ ಸಿಬ್ಬಂದಿ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದಾರೆ.

ಮಹಾರಾಷ್ಟ್ರದಿಂದ ಕಲಬುರಗಿ ನಗರಕ್ಕೆ ಬಂದು ಕೆಲವರು ಭ್ರೂಣಲಿಂಗ ಪರೀಕ್ಷೆ ಮಾಡಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಉಸ್ಮಾನಬಾದ್ ಆರೋಗ್ಯ ಇಲಾಖೆ ಸಿಬ್ಬಂದಿ, ನಿನ್ನೆ ಕಲಬುರಗಿ ಜಿಲ್ಲಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿದ್ದ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ತಂಡದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.