ಕಲಬುರಗಿ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಬಗ್ಗೆ ಮಾಹಿತಿ ನೀಡದೆ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ ಬಹುಮನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಾಗಿದೆ.
ಕೊರೊನಾ ಸೋಂಕಿನಿಂದ ಮೃತಪಟ್ಟ 65 ವರ್ಷದ ವೃದ್ಧ, ಏಪ್ರೀಲ್ 4 ರಿಂದ 6 ರವರೆಗೆ ಬಹುಮನಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆಸ್ಪತ್ರೆಯಿಂದ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಜಿಲ್ಲಾಡಳಿತಕ್ಕೆ ನೀಡಬೇಕಿತ್ತು. ಆದರೆ, ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಬಗ್ಗೆ ನಿಖರ ಮಾಹಿತಿ ನೀಡಿಲ್ಲವೆಂಬ ಆರೋಪ ಆಸ್ಪತ್ರೆ ಮೇಲಿದೆ. ವ್ಯಕ್ತಿಯ ಸ್ಥಿತಿ ಗಂಭೀರವಾದಾಗ ಆಸ್ಪತ್ರೆಯವರು ಆರೋಗ್ಯ ಇಲಾಖೆ ಗಮನಕ್ಕೆ ತಂದಿದ್ದರು.
ನಂತರ ಇಎಸ್‌ಐ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಈಗ ಅದೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ವ್ಯಕ್ತಿ ಸಾವಿನ ನಂತರ ಕೊರೊನಾ ಸೋಂಕಿರೋದು ದೃಢಪಟ್ಟಿತ್ತು. ವ್ಯಕ್ತಿ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಅನ್ನೋ ಆರೋಪವಿದೆ. ಈ ಹಿನ್ನೆಲೆ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ವೈದ್ಯರು, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರ ನಾಗಲೀಕರ್ ನೀಡಿದ ದೂರಿನ ಮೇರೆಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.