ಕಲಬುರಗಿ: ಹೈ- ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಆರು ಜಿಲ್ಲೆಯ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಶಾಲೆಗಳ ಬಲವರ್ಧನೆ ಸಬಂಧ ವರದಿ ನೀಡಬೇಕು ಎಂದು ತಿಳಿಸಲಾಗಿದೆ.
ಶಾಲೆಗಳ ಮೂಲಭೂತ ಸೌಲಭ್ಯಗಳ ಕುರಿತು ಬರುವ ಜುಲೈ 3ರ ಒಳಗೆ ವರದಿ ನೀಡುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಳೆದ ಜೂನ್ 27 ರಂದು ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಭಾಗದಲ್ಲಿನ ಶಾಲೆಗಳ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಸೇರಿದಂತೆ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಆರು ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಜೊತೆ ಚರ್ಚಿಸಿ ಸುಬೋಧ ಯಾದವ್ ಅವರು ಅಧಿಕಾರಿಗಳಿಗೆ ವದರಿ ಕೊಡುವಂತೆ ತಿಳಿಸಿದ್ದಾರೆ.
ಜುಲೈ 3ರ ಒಳಗೆ ಎಲ್ಲಾ ಡಿಡಿಪಿಐಗಳು ವರದಿ ನೀಡಬೇಕು. ಜುಲೈ 4 ಅಥವಾ 5 ರಂದು ಮತ್ತೊಮ್ಮೆ ಪರಾಮರ್ಶಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದರು.