ಕಲಬುರಗಿ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸೆ.25 ಸೋಮವಾರ ದಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆ ವರೆಗೆ ಚಿಂಚೋಳಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ "ಜನತಾ ದರ್ಶನ" ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನುಮ್, ಸುಮಾರು 4 ಸಾವಿರ ಜನ ಸೇರುವ ನಿರೀಕ್ಷೆ ಇರುವುದರಿಂದ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಶಾಮಿಯಾನ್ ಟೆಂಟ್ ಹಾಕಲಾಗಿದ್ದು, ಪಾರ್ಕಿಂಗ್ ವ್ಯವಸ್ಥೆ ಕೂಡಾ ಸುಗಮಗೊಳಿಸಲಾಗಿದೆ. ಇಲಾಖಾವಾರು ಪ್ರತ್ಯೇಕ ಮಳಿಗೆ ತೆರೆದು ಸಾರ್ವಜನಿಕರಿಗೆ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಆಹಾರ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ರೇಷ್ಮೆ, ತೋಟಗಾರಿಕೆ, ಕಾರ್ಮಿಕ, ಸಂಚಾರಿ ಪೊಲೀಸ್, ಕಂದಾಯ ಹೀಗೆ ಪ್ರಮುಖ 20 ಇಲಾಖೆಯ ಮಳಿಗೆ ಹಾಕಲಾಗುತ್ತಿದೆ. ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆವೈಸಿ, ವೋಟರ್ ಐಡಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಿಬ್ಬಂದಿಗಳು ಸ್ಥಳದಲ್ಲಿ ಇರಲಿದ್ದಾರೆ. ಕುಂದುಕೊರತೆ ಅರ್ಜಿ ಸ್ವೀಕಾರಕ್ಕೆ 15 ಕೌಂಟರ್ ತೆರೆಯಲಾಗುತ್ತಿದೆ.
ಇದನ್ನೂ ಓದಿ : ಶಿಕ್ಷಣ ವ್ಯವಸ್ಥೆಯನ್ನು ಸಂವಿಧಾನದ ಆಶಯದಂತೆ ಕಟ್ಟಬೇಕಿದೆ: ಶಿಕ್ಷಣ ತಜ್ಞ ನಿರಂಜನ್ ಆರಾಧ್ಯ
ಇದಲ್ಲದೆ ಪಿಂಚಣಿ ಆದೇಶ, ಯೋಜನೆಗಳ ಮಂಜೂರಾತಿ ಪತ್ರ ಸೇರಿದಂತೆ ವಿವಿಧ ಇಲಾಖೆಯ ಯೋಜನೆಯಡಿ ಸರಕು-ಸಾಮಗ್ರಿ ವಿತರಣೆ ಸೌಲಭ್ಯವನ್ನು ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಲಿದ್ದಾರೆ. ಪ್ರಮುಖ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಸರ್ವ ಇಲಾಖೆ ಅಧಿಕಾರಿಗಳು ಇರಲಿದ್ದಾರೆ. ಸರ್ಕಾರವೇ ಮನೆ ಬಾಗಿಲಿಗೆ ಬರುತ್ತಿದ್ದು, ಜನತೆ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಫೌಜಿಯಾ ತರುನ್ನಮ್ ಮನವಿ ಮಾಡಿದರು.
ಏಕಕಾಲದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ : ಕಳೆದ ವಾರ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು, ಸೆ.25 ರಂದು ಏಕಕಾಲದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಠಾಚಾರಕ್ಕೆ, ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಬೇಕೆಂದು ಸೂಚಿಸಿದ್ದರು.
ಇದನ್ನೂ ಓದಿ : ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 'ಜನತಾ ದರ್ಶನ'ಕ್ಕೆ ಸೂಚನೆ