ಕಲಬುರಗಿ: ರಾಷ್ಟ್ರೀಯ ಹೊಸ ಶಿಕ್ಷಣ ನೀತಿ(ಎನ್ಇಪಿ) ವಿರೋಧಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಶಿಕ್ಷಕರು ಆನ್ಲೈನ್ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ವಾಡಿ ಪಟ್ಟಣದಲ್ಲಿ ಎನ್ಇಪಿ ವಿರೋಧಿಸಿ ಭಿತ್ತಿಪತ್ರ ಪ್ರದರ್ಶಿಸಿದ ಶಿಕ್ಷಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಸಂಚಾಲಕ ವೀರಭದ್ರಪ್ಪ ಆರ್. ಕೆ. ಅವರು, ಶಿಕ್ಷಣ ತಜ್ಞರು, ವಿಜ್ಞಾನಿಗಳು, ಬುದ್ಧಿಜೀವಿಗಳು, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಮತ್ತು ಭಾರತದ ಜನರ ಅಮೂಲ್ಯವಾದ ಅಭಿಪ್ರಾಯಗಳು ಹಾಗೂ ವಿರೋಧಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕೇಂದ್ರ ಸಚಿವ ಸಂಪುಟ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ ನೀಡಿದೆ. ಇದೊಂದು ಅವೈಜ್ಞಾನಿಕ ಶಿಕ್ಷಣ ನೀತಿಯಾಗಿದ್ದು, ಸರ್ಕಾರ ಈ ಜನವಿರೋಧಿ ಎನ್ಇಪಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.