ಕಲಬುರಗಿ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ, ಸಡಗರ ಕಳೆಗಟ್ಟಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ 7 ಜಿಲ್ಲೆಗಳು ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು ಸೆಪ್ಟೆಂಬರ್ 17ಕ್ಕೆ 75ವರ್ಷಗಳಾಗುತ್ತಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯದ ಸಂಭ್ರಮ ಅಮೃತ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿ, ಬೆಳಗ್ಗೆ 8:45ಕ್ಕೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ದಿವಸ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಿದ್ದಾರೆ. ಬಳಿಕ ನಗರದ ನೂತನ ವಿದ್ಯಾಲಯ (ಎನ್ ವಿ) ಮೈದಾನದಲ್ಲಿ ಹಮ್ಮಿಕೊಂಡಿರುವ ಕ.ಕ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.
ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಸಾವಿರಾರು ಫಲಾನುಭವಿಗಳಿಗೆ ವಿತರಿಸಲಿದ್ದಾರೆ. ಅಮೃತ ಮಹೋತ್ಸವ ಹಿನ್ನೆಲೆ ಕಲಬುರಗಿ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, ನಗರದಾದ್ಯಂತ ಬೃಹತ್ ಸ್ವಾಗತ ಕಮಾನು, ಫ್ಲೆಕ್ಸ್, ಬ್ಯಾನರ್ಸ್ ರಾರಾಜಿಸುತ್ತಿವೆ. ನಗರದ ಶಕ್ತಿಕೇಂದ್ರ ವಿಕಾಸಸೌಧ ಒಳಗೊಂಡಂತೆ ನಗರದ ಪ್ರಮುಖ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರಿಕ ಮಾಡಲಾಗಿದೆ. ಅಮೃತ ಮಹೋತ್ಸವ ಅಂಗವಾಗಿ ಎನ್ ವಿ ಮೈದಾನದಲ್ಲಿ ಮಾರಾಟ, ವಸ್ತು ಪ್ರದರ್ಶನ ಮಳಿಗೆಗಳನ್ನು ಹಾಕಲಾಗಿದ್ದು, ಏಳು ಜಿಲ್ಲೆಗಳ ವರ್ತಕರು ಭಾಗಿಯಾಗಿದ್ದಾರೆ.
ಸಿಎಂ ಆಗಮನ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಕಮಿಷನರ್, ಡಿಸಿಪಿ, ಡಿಎಸ್ಪಿ, ಪಿಐ, ಪಿಎಸ್ಐ, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ 1,250 ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಅಮೃತ ಮಹೋತ್ಸವದಲ್ಲಿ 40 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಸೆ.24ಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿ