ಕಲಬುರಗಿ: ಆಶಾ ಕಾರ್ಯಕರ್ತೆ ಹಾಗೂ ಆಕೆಯ ಪತಿಯ ಮೇಲೆ ಕೊರೊನಾ ಸೋಂಕಿತರ ಕುಟುಂಬವೊಂದು ಕಣ್ಣಿಗೆ ಕಾರದ ಪುಡಿ ಎರಚಿ ರಾಡ್ನಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಾಂಪುರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋವಿಡ್ ಡ್ಯೂಟಿ ನಿಮಿತ್ತ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಮಾಹಿತಿ ಸಂಗ್ರಹಿಸಲು ತೆರಳಿದ್ದ ವೇಳೆ ಮಾಹಿತಿ ನೀಡಲು ನಿರಾಕರಿಸಿದ್ದಲ್ಲದೆ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ. ಬಳಿಕ ಆಶಾ ಕಾರ್ಯಕರ್ತೆಯ ಮನೆ ಬಳಿ ಬಂದು ಅವಾಚ್ಯ ಶಬ್ದಳಿಂದ ನಿಂದಿಸಿ ಕಣ್ಣಿಗೆ ಕಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಜ್ಯೋತಿ ಪವಾರ್ ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಲು ಬಂದ ಅವರ ಪತಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆ ಖಂಡಿಸಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ವಾಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿದರು. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಒಂದೇ ಕುಟುಂಬದ ಮೂರು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ವಾಡಿ ಪೊಲೀಸ್ ಠಾಣೆ ಪಿಎಸ್ಐ ವಿಜಯಕುಮಾರ್ ಬಾವಗಿ ತಿಳಿಸಿದ್ದಾರೆ.