ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಕಲಬುರಗಿಯಲ್ಲಿ ಲೋಕಾ ದಾಳಿ: ಕಲಬುರಗಿಯಲ್ಲಿ ಎರಡು ಕಡೆ ಹಾಗೂ ಹಾವೇರಿಯಲ್ಲಿ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು (ಸೋಮವಾರ) ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಸ್.ಎಸ್. ಕರ್ನೂಲ್ ನೇತೃತ್ವದಲ್ಲಿ ಬೀದರ ವಲಯ ಅರಣ್ಯಾಧಿಕಾರಿ ಮತ್ತು ದೇವದುರ್ಗದ ಕೆಬಿಜೆಎನ್ಎಲ್ ಇಇ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಹಾವೇರಿಯಲ್ಲಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಲೋಕಾ: ಇನ್ನೂ ಹಾವೇರಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಹಾವೇರಿಯ ಆರ್ಎಫ್ಓ ಅವರ ಎರಡು ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಆರ್ಎಫ್ಓ ಅವರ ಹಾವೇರಿ ಮನೆ ಮತ್ತು ಕಚೇರಿ ಸೇರಿದಂತೆ ಏಕಕಾಲಕ್ಕೆ ಒಟ್ಟು ನಾಲ್ಕು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮತ್ತೊಬ್ಬ ಆರ್ಎಫ್ಓ ಮನೆ ಹಾಗೂ ಕಚೇರಿಗಳ ಮೇಲೂ ಸಹ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುತ್ತಿದ್ದಾರೆ.
ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ: ರಾಯಚೂರು ಜಿಲ್ಲೆಯ ನಿರ್ಮಿತಿ ಕೇಂದ್ರ, ಕ್ಯಾಷ್ಯುಟೆಕ್ ಯೋಜನಾ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ರಾಯಚೂರು ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್. ಅರಸಿದ್ದಿ ನೇತೃತ್ವದಲ್ಲಿ ದಾಳಿ ನಡೆದಿದೆ. ನಗರದ ಗಂಗಾಪರಮೇಶ್ವರಿ ಕಾಲೋನಿಯಲ್ಲಿನ ಮನೆ ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸುವ ಮೂಲಕ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಬಳ್ಳಾರಿಯಲ್ಲೂ ಲೋಕಾಯುಕ್ತ ದಾಳಿ: ರೆವಿನ್ಯೂ ಇನ್ಸ್ಪೆಕ್ಟರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯ ಗುಗ್ಗರಹಟ್ಟಿ ಮತ್ತು ತಹಸೀಲ್ದಾರ್ ಕ಼ಚೇರಿಯಲ್ಲಿರುವ ರೆವಿನ್ಯೂ ಇನ್ಸ್ಪೆಕ್ಟರ್ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪ ಇದೆ. ಹೀಗಾಗಿ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ, ಹೊಸಪೇಟೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಬೆಳಗಾವಿಯಲ್ಲೂ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ: ಬೆಳಗಾವಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ ಎಇಇ ಅವರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ನಡೆಸಲಾಗಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂಟ್‌ನಲ್ಲಿರುವ ಮನೆ, ಕಿತ್ತೂರು ಮತ್ತು ಖಾನಾಪುರದಲ್ಲಿ ಇರುವ ನಿವಾಸದ ಮೇಲೆ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಳಗಾವಿ ಅವರೇ ಆದ ಕಲಬುರಗಿಯ ನಗರ ಹಾಗೂ ಗ್ರಾಮೀಣ ಯೋಜನಾ ಜಂಟಿ ನಿರ್ದೇಶಕರೊಬ್ಬರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿನ ಕಾರ್ಖಾನೆ ಮೇಲೆ ದಾಳಿ ಮಾಡಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಇಬ್ಬರು ಅಧಿಕಾರಿಗಳ ಮೇಲಿನ ದಾಳಿ ವೇಳೆ ಏನೆಲ್ಲಾ ಸಿಕ್ಕಿದೆ ಎಂಬ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ನಿರ್ಮಾಣ: ಗೃಹ ಸಚಿವ ಜಿ ಪರಮೇಶ್ವರ್