ಕಲಬುರಗಿ: ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಮಾದಿಗ ದಂಡೋರ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂದಿಕೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೂವತ್ತಕ್ಕೂ ಅಧಿಕ ಜನ ಮಾದಿಗ ದಂಡೋರ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಾದಿಗ ಸಮುದಾಯವು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹೋರಾಟ ಮಾಡುತ್ತಲೇ ಬಂದಿದೆ. ಆದರೂ ಸಹ ಆಡಳಿತರೂಢ ಸರ್ಕಾರಗಳು ಮಾದಿಗ ಸಮುದಾಯದ ಹೋರಾಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ಪ್ರತಿಭಟನಾಕಾರರು ಪಟ್ಟು ಬಿಡದ ಹಿನ್ನೆಲೆ ಪೊಲೀಸರು 30ಕ್ಕೂ ಅಧಿಕ ಜನ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ: ಇನ್ನು ಮುಂದೆ ವಿದ್ಯುತ್ ಸಂಪರ್ಕಕ್ಕಾಗಿ ಒಸಿ ಅಗತ್ಯ ಇಲ್ಲ: ನಿಯಮ ತಿದ್ದುಪಡಿ ಮಾಡಿದ ಕೆಇಆರ್ಸಿ!