ಕಲಬುರಗಿ: ಜಿಲ್ಲಾ ಪಂಚಾಯಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳ ಮೈ ಚಳಿ ಬಿಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಉದ್ಯೋಗ ಖಾತ್ರಿ, ಗ್ರಾಮೀಣ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಉದ್ಯೋಗ ಖಾತ್ರಿ ಯೋಜನೆಗಳನ್ನು ಬಳಸಿಕೊಂಡು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆದು ಸಾಧನೆ ಮಾಡಿದ ರೈತರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಧನೆ ಮಾಡಿದ ರೈತರ ವಿಡಿಯೋಗಳನ್ನು ಮಾಡಿಸಿ ಇತರೆ ಹಳ್ಳಿಗಳಲ್ಲಿ ಪ್ರಸಾರ ಮಾಡಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರೋತ್ಸಾಹಿಸುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಈಶ್ವರಪ್ಪ ಸೂಚಿಸಿದರು. ಅಲ್ಲದೆ ಗ್ರಾಮೀಣ ಭಾಗದಲ್ಲಿ ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.