ಕಲಬುರಗಿ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ತತ್ತರಿಸಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರ ಡ್ಯಾಂಗಳಿಂದ ಭೀಮಾ ನದಿಗೆ ಹರಿದು ಬರುತ್ತಿರುವ ನೀರಿನಿಂದಲೂ ಜನ ಪ್ರವಾಹ ಭೀತಿಯಲ್ಲಿದ್ದಾರೆ. ಆದರೂ ಜಿಲ್ಲೆಯತ್ತ ಬಾರದೆ ವಿದೇಶದಲ್ಲಿರುವ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮೇಲೆ ಜಿಲ್ಲೆಯ ಜನತೆ ಅಸಮದಾನದಲ್ಲಿದ್ದರು. ಇದರ ಬೆನ್ನಲ್ಲೇ ಇದೀಗ ವಿದೇಶದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ನಿರಾಣಿ ಚರ್ಚೆ ನಡೆಸಿದ್ದಾರೆ.
ಜಿಲ್ಲೆಯ ಸಮಗ್ರ ಚಿತ್ರಣ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲಾಡಳಿತ ತಕ್ಷಣವೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆ ಸಂಬಂಧ ಪ್ರಸ್ತುತ ನಿರಾಣಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಅಮೆರಿಕ ಪ್ರವಾಸದಲ್ಲಿದ್ದರೂ ಜಿಲ್ಲೆಯ ಪ್ರತಿಯೊಂದು ಮಾಹಿತಿಯನ್ನು ಕ್ಷಣಕ್ಷಣಕ್ಕೂ ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವುದು, ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಯುವುದು, ಸಂತ್ರಸ್ತರಿಗೆ ಊಟ, ಬಟ್ಟೆ, ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ಪರಿಹಾರ ಕಾರ್ಯಕ್ಕೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ರಜೆ ನೀಡಬಾರದು. ಅಶಿಸ್ತು ತೋರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲು ಸೂಚನೆ ಕೊಟ್ಟಿದ್ದಾಗಿ ಹೇಳಿದ್ದಾರೆ.
ಇನ್ನು, ಮಹಾರಾಷ್ಟ ಡ್ಯಾಂಗಳಿಂದ ಬರುವ ನೀರು ಕಡಿಮೆಯಾಗಿದ್ದರಿಂದ ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಭೀತಿಯಿಲ್ಲ. ಹೀಗಾಗಿ ಜನರು ಆತಂಕ ಪಡಬೇಕಾಗಿಲ್ಲ, ಜನರ ರಕ್ಷಣೆ ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ. ಮಹಾರಾಷ್ಟ್ರದ ಸಚಿವರೊಂದಿಗೆ ತಾವು ಸಹ ಕರೆ ಮಾಡಿ ಮಾತನಾಡಿದ್ದು, ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಉಜನಿ ಜಲಾಶಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಂಪರ್ಕದಲ್ಲಿದ್ದು, ಅಲ್ಲಿಯೂ ನೀರಿನ ಮಟ್ಟ ತಗ್ಗಿದ ಪ್ರಯುಕ್ತ 60 ಸಾವಿರ ಕ್ಯೂಸೆಕ್ ನೀರನ್ನು ಮಾತ್ರ ನದಿಗೆ ಹರಿಸಿದ್ದಾರೆ. ಹೆಚ್ಚಿನ ನೀರು ಬರುವ ಆತಂಕ ಸದ್ಯಕ್ಕಿಲ್ಲ, ಹೀಗಾಗಿ ಸೊನ್ನ ಬ್ಯಾರೇಜ್‌ದಿಂದ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣವು ಕಡಿಮೆ ಆಗಲಿದೆ ಎಂದು ಸಚಿವ ನಿರಾಣಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಕಲಬುರಗಿಗೆ ಪ್ರವಾಹ ಭೀತಿ