ಕಲಬುರಗಿ: ವ್ಯಕ್ತಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಗೆ ಇಲ್ಲಿನ ಜಿಲ್ಲಾ 3ನೇ ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ನಿಲೇಶ ಖರತ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2017ರಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದರಲ್ಲಿ ರಾತ್ರಿ ವೇಳೆ ಮಲಗಿದ್ದ ಎಂಎಸ್‌ಕೆ ಮಿಲ್ ನಿವಾಸಿ ಶರೀಫ್ ಎನ್ನುವ ವ್ಯಕ್ತಿ ಮೇಲೆ ಖಾಲಿ ಸಿಲಿಂಡರ್ ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡ ಶರೀಫ್‌ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ.
ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ತನಿಖೆ ನಡೆಸಿದ ಅಂದಿನ ಸರ್ಕಲ್ ಇನ್ಸ್ಪೆಕ್ಟರ್, ನಿಲೇಶ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ ವಿ.ಎನ್, ನಿಲೇಶ ಖರತ್ಗೆ 7 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.