ಕಲಬುರಗಿ: ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆಯಿಂದಾಗಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಇದನ್ನು ತಪ್ಪಿಸಲು ಕೂಡಲೇ ಎಲ್ಲ
ಪ್ರತಿಪಕ್ಷಗಳು ವಿಶ್ವಸಂಸ್ಥೆಯ ಮೊರೆ ಹೋಗುವಂತೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗುರುಶಾಂತ ಪಟ್ಟೇದಾರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ್ ಖರ್ಗೆಯವರ ಸೋಲೇ ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆಗೆ ಹಿಡಿದ ಕೈಗನ್ನಡಿಯಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕ ಸ್ಥಾನ ಗೆದ್ದಿರುವುದು ಕೂಡಾ ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆಯಿಂದಲೇ ಎಂಬ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್, ಜೆಡಿಎಸ್, ಬಿಎಸ್‍ಪಿ ಸೇರಿದಂತೆ 21 ರಾಷ್ಟ್ರೀಯ ಪಕ್ಷಗಳನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿ ಮಾಡಿದ ಕುತಂತ್ರ ಇದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆಗೆ ಷಡ್ಯಂತ್ರ ರೂಪಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದು ದೂರಿದರು.
ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಎಲ್ಲ ತನಿಖಾ ಹಾಗೂ ನ್ಯಾಯಾಂಗ ವ್ಯವಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ದುರಾಡಳಿತ ನಡೆಸಿದೆ. ವಿದ್ಯುನ್ಮಾನ ಮತಯಂತ್ರದಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದಂತಾಗಿದೆ. ಕೂಡಲೇ ಪ್ರತಿಪಕ್ಷಗಳು ವಿಶ್ವಸಂಸ್ಥೆ ಮೊರೆ ಹೋಗುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.