ಕಲಬುರಗಿ: ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಾರಿಗೆ ನೌಕರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಎನ್ಈಕೆಎಸ್ಆರ್ಟಿಸಿ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೆಲ್ಕೂರ್ ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯ ಬಗ್ಗೆ ಮಾಹಿತಿ ಇಲ್ಲದವರು ಹೋರಾಟದ ನೇತೃತ್ವ ವಹಿಸಿಕೊಂಡಿದ್ದಾರೆ. ಇಲಾಖೆಯ ಬಗ್ಗೆ ಮಾಹಿತಿ ಇರುವವರಿಗೆ ಹೋರಾಟದ ನೇತೃತ್ವ ವಹಿಸಿದರೆ ಒಳ್ಳೆಯದು ಎಂದರು.
ಉತ್ಸಾಹದಿಂದ ಸಾರ್ವಜನಿಕರಿಗೆ ಸೇವೆ ನೀಡಲು ಬರುವ ಸಾರಿಗೆ ಸಿಬ್ಬಂದಿಯ ಮೇಲೆ ದಬ್ಬಾಳಿಕೆ ನಡೆಸಿದರೆ, ಸಾರಿಗೆ ನಿಗಮಗಳ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದರೆ, ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಪಾಟೀಲ್ ಎಚ್ಚರಿಕೆ ನೀಡಿದರು.