ಕಲಬುರಗಿ: ಜಿಲ್ಲೆಗೆ ಫೆಬ್ರವರಿ 27ರಿಂದ ಮಾರ್ಚ್ 3ರವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರಿಗೆ ಸಿಆರ್ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27ರಿಂದ ಮಾ.3ರವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಹೊರಬಿದ್ದಿದೆ.
ಶಿವರಾತ್ರಿ ನಿಮಿತ್ತ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಅಲ್ಲದೆ ಫೆ. 27ಕ್ಕೆ ಆಳಂದ ಚಲೋಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್!
ಆದರೆ, ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 01ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಕೂಡ ಇದೆ. ಹೀಗಾಗಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಕಾರಣ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.