ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು ಚುನಾವಣಾಧಿಕಾರಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ಚುನಾವಣಾ ಅಧಿಸೂಚನೆ ಪ್ರಕಟಿಸಿದ್ದಾರೆ.
ಅಧಿಸೂಚನೆ ಅನ್ವಯ ಅಕ್ಟೋಬರ್ 1 ರಿಂದ 8ರ ವರೆಗೆ ನಿತ್ಯ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಮಿನಿ ವಿಧಾನಸೌಧಾದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯ ಕಾನ್ಫೆರೆನ್ಸ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ಅಕ್ಟೋಬರ್ 9 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಅಕ್ಟೋಬರ್ 12 ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ಬೆಳಗ್ಗೆ 8 ರಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ನವೆಂಬರ್ 2 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯು ಕಲಬುರಗಿ ವಿಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಒಳಗೊಂಡಿವೆ. 24,941 ಮತದಾರರಿದ್ದಾರೆ. ಅಕ್ಟೋಬರ್ 8 ರ ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ.