ಕಲಬುರಗಿ: ಡಿಜಿಟಲ್ ಇಂಡಿಯಾ ಪರಿಕಲ್ಪನೆಯಡಿ ಪ್ರತಿ ಹಳ್ಳಿಯೂ ಡಿಜಿಟಲ್ ಸೇವೆ ಪಡೆಯಬೇಕು ಎಂಬುದು ಕೇಂದ್ರ ಸರ್ಕಾರದ ಸದಾಶಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಲೋಕಸಭಾ ಸದಸ್ಯ ಹಾಗೂ ದೂರವಾಣಿ ಸಲಹಾ ಸಮಿತಿ ಅಧ್ಯಕ್ಷ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.
ಬಿ.ಎಸ್.ಎನ್.ಎಲ್ ಕಚೇರಿಯಲ್ಲಿ ನಡೆದ ದೂರವಾಣಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಕೊನೆ ವ್ಯಕ್ತಿಗೂ ಡಿಜಿಟಲ್ ಸೌಲಭ್ಯಗಳನ್ನು ಒದಗಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯ ಬಹುತೇಕ ಗ್ರಾಮ ಮತ್ತು ಸಣ್ಣ ಪಟ್ಟಣಗಳಲ್ಲಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂಟರ್ನೆಟ್ ಬಿಲ್ ಪಾವತಿಯಿಲ್ಲದೆ ಗ್ರಾಮೀಣ ಭಾಗದಲ್ಲಿ ಇಂಟರ್ನೆಟ್ ಸೇವೆ ಸಿಗುತ್ತಿಲ್ಲ ಎಂಬ ದೂರುಗಳು ನಮ್ಮ ಗಮನಕ್ಕೆ ಬಂದಿವೆ. ಸ್ಥಳೀಯವಾಗಿ ಬಗೆಹರಿಸಬಹುದಾದ ಈ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಜಿಲ್ಲಾ ಪಂಚಾಯತ್ ಮತ್ತು ಬಿ.ಎಸ್.ಎನ್.ಎಲ್ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗೆ ಸೂಚಿಸಿದರು.
ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಕೇಂದ್ರ ಸ್ಥಾನದಲ್ಲಿ ಹಾಗೂ ನಗರದ ಜಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವೈಫೈ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.