ಕಲಬುರಗಿ: ಕೊರೊನಾ ರೋಗಿಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ಹೋಗಿದೆ. ಈ ಹಿನ್ನೆಲೆಯಲ್ಲಿ ನಗರದ ಧನ್ವಂತರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕಿತರಿಗೆ ಈ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಸಿಗಲಿದ್ದು, ಬಸವೇಶ್ವರ ಆಸ್ಪತ್ರೆಯಲ್ಲಿಯೂ ಕೆಲ ವಿಭಾಗಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,370ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 229 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು 1,426 ಆ್ಯಕ್ಟಿವ್ ಕೇಸ್ ಗಳಿವೆ.