ಕಲಬುರಗಿ: ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಶಾಕ್ ಕೊಟ್ಟಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ರಾಜ್ಯದ ಅನೇಕ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ, ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಈಗ ರಾಜ್ಯ ಸರ್ಕಾರವು ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿದೆ. ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ 2017 ರ 'ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯ್ದೆ'ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಈ ಮೂಲಕ ರಾಜ್ಯದ ರೈತರ ಹಿತವನ್ನು ಬಲಿಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾಯ್ದೆಗೆ ತಿದ್ದುಪಡಿ ತರುವ ಮುನ್ನ ವಿಧಾನಮಂಡಲ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಆದರೆ ವಿಧಾನಮಂಡಲ ಅಧಿವೇಶನ ಇಲ್ಲದ ಈ ಸಮಯವನ್ನು ಬಳಸಿಕೊಂಡು ತುರ್ತು ಸಂದರ್ಭದ ನೆಪ ಹೇಳಿ, ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕಾಯ್ದೆಯ ಬಗ್ಗೆ ರೈತ ಮುಖಂಡರೊಂದಿಗೆ, ಸಂಘಟನೆಗಳೊಂದಿಗೆ ಹಾಗೂ ವಿರೋಧ ಪಕ್ಷಗಳೊಂದಿಗೆ ಚರ್ಚಿಸದೇ ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು ಅಸಮಾಧಾನ ಹೊರಹಾಕಿದ್ದಾರೆ.
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಪಾರ ನಷ್ಟವಾಗಲಿದೆ ಎಂದು ಕಿಡಿಕಾರಿದ ಖರ್ಗೆ, ರಾಜ್ಯ ಬಿಜೆಪಿ ಸರ್ಕಾರ ಕೂಡಲೇ ಎಚ್ಚೆತ್ತು, ರೈತರಿಗೆ ಮಾರಕವಾಗಿರುವ ಈ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.