ಕಲಬುರಗಿ: ಪೊಲೀಸ್ ಅಧಿಕಾರಿಯೊಬ್ಬರು ಗೋ ರಕ್ಷಣೆ ಮಾಡುವ ಬದಲು ಹಣ ಪಡೆದು ಗೋವುಗಳನ್ನು ಕಸಾಯಿಖಾನೆಗಳಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಆಂದೋಲ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಕ್ರಮ ಗೋ ಸಾಗಾಣಿಕೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಹಣ ಪಡೆದು ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸಿಕೊಟ್ಟಿದ್ದು, ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತರು ಆಗಮಿಸಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು, ರಸ್ತೆ ಮೇಲೆ ಭಜನೆ ಮಾಡಿದರು.