ಕಲಬುರಗಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ.
ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ರಸ್ತೆ ಮೇಲೆ ಕುಳಿತು ಸಾರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಕೊರೊನಾ ಹಾವಳಿ ಕಡಿಮೆಯಾಗಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭಗೊಂಡು ತಿಂಗಳುಗಳೇ ಕಳೆದಿವೆ. ಆದರೂ ಲಾಕ್ಡೌನ್ ಸಮಯದಲ್ಲಿ ಸ್ಥಗಿತಗೊಳಿಸಲಾಗಿದ್ದ ಬಸ್ ವ್ಯವಸ್ಥೆ ಆರಂಭಿಸದೇ ಸಾರಿಗೆ ಇಲಾಖೆ ನಿರ್ಲಕ್ಷಿಸುತ್ತಿದೆ.
ಇದರಿಂದಾಗಿ ರಾವೂರ್ ಗ್ರಾಮದಿಂದ ನಗರ ಪ್ರದೇಶಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ವಿಪರೀತ ಸಮಸ್ಯೆ ಉಂಟಾಗಿದೆ. ಚಿತ್ತಾಪುರಕ್ಕೆ ತೆರಳಲು ಬೆಳಗ್ಗೆ ಕೇವಲ ಒಂದು ಬಸ್ ಬಿಡಲಾಗಿದ್ದು, ನೂಕುನುಗ್ಗಲಿನಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸುವ ಪರಿಸ್ಥಿತಿ ಬಂದೊದಗಿದೆ.
ಸಮಯಕ್ಕೆ ಸರಿಯಾಗಿ ಬಸ್ ಸಿಗದ ಕಾರಣ ಕ್ಲಾಸ್ಗಳಿಗೆ ಹಾಜರಾಗದೆ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿದೆ. ಈ ಕುರಿತು ಹಲವು ಬಾರಿ ಸಾರಿಗೆ ಇಲಾಖೆಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನೆರವಾಗಬೇಕೆಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ಮಾಸಿಕ ಪಾಸ್ ತೆಗೆಸಿದರೂ ಯಾವುದೇ ಪ್ರಯೋಜನವಿಲ್ಲ. ಒಂದು ಕಡೆ ಬಸ್ ವ್ಯವಸ್ಥೆ ಸರಿಯಾಗಿಲ್ಲ ಇನ್ನೊಂದು ಕಡೆ ಯಾದಗಿರಿಯಿಂದ ಕಲಬುರಗಿಗೆ ಹೋಗುವ ಎಕ್ಸ್ಪ್ರೆಸ್ ಬಸ್ಗಳಲ್ಲಿ ಪಾಸ್ ನಡೆಯೋದಿಲ್ಲ ಎಂದು ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಬಿಡುತ್ತಿಲ್ಲ. ಇದರಿಂದಾಗಿ ಬಡ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಿ ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.