ಕಲಬುರಗಿ: ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಈ ಎಲ್ಲ ಕಾಲೇಜುಗಳಲ್ಲಿ 14,554 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿಯೇ ಸೇವೆ ಸಲ್ಲಿಸುತ್ತಿದ್ದರೂ ಸರ್ಕಾರ ಮಾತ್ರ ನಮ್ಮ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಕೂಡಲೇ ಸರ್ಕಾರ ನಮ್ಮ ಸೇವೆ ಪರಿಗಣಿಸಿ, ಸೇವಾಭದ್ರತೆ ಒದಗಿಸುವುದರ ಜೊತೆಗೆ ಸೂಕ್ತ ವೇತನ ಒದಗಿಸುವಂತೆ ಹಾಗೂ ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡದೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.