ಕಲಬುರ್ಗಿ : ಕೊರೊನಾ ಆಂತಕದ ನಡುವೆ ನಾಳೆ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ ಕಲಬುರ್ಗಿ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾರ್ಚ್ 23ರಂದು ನಡೆಯಬೇಕಿದ್ದ ಈ ಪರೀಕ್ಷೆ ಕೊರೊನಾ ಲಾಕ್‌ಡೌನ್ ಹಿನ್ನೆಲೆ ಮುಂದೂಡಿಕೆಯಾಗಿತ್ತು. ಇದೀಗ ನಾಳೆ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿದ್ದು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ 23,103 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ 47 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಪರೀಕ್ಷಾ ಕೊಠಡಿಯ ಪ್ರತಿ ಬ್ಲಾಕ್ನಲ್ಲಿ 12 ಮತ್ತು ದೊಡ್ಡ ಕ್ಲಾಸ್ ರೂಮ್ ನಲ್ಲಿ 24 ರಂತೆ, ಪ್ರತಿ ಬೆಂಚ್ಗೆ ಇಬ್ಬರು ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮುಖಾಂತರ ಪರೀಕ್ಷೆ ಬರೆಯೋದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಣ ಇಲಾಖೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನ ಕ್ಲೀನ್ ಮಾಡಿಸಿ ಸ್ಯಾನಿಟೈಸರ್ ಸಿಂಪಡಿಸಿ ರೆಡಿ ಮಾಡಿದ್ದಾರೆ. ಬೆಳಗ್ಗೆ 8 : 30ಕ್ಕೆ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೊಠಡಿಗೆ ಎಂಟ್ರಿ ಆಗುವ ಮುನ್ನವೇ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಕೂಡ ಇರಲಿದ್ದಾರೆ. ಜೊತೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಉಪನಿರ್ದೇಶಕ ಶಿವಶರಣಪ್ಪ ಮಾಹಿತಿ ನೀಡಿದ್ದಾರೆ.