ಕಲಬುರಗಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಸೇರಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅಕ್ಟೋಬರ್ 13 ಮತ್ತು 14ರಂದು ಎರಡು ದಿನಗಳ ಕಾಲ ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿದ್ದು, ಎಚ್ಚರಿಕೆಯಿಂದ ಇರುವಂತೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ ಬೀದರ್, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಅಕ್ಟೋಬರ್ 15ರಂದು ಜಿಲ್ಲೆಯಾದ್ಯಂತ ಸಾಧಾರಣ ಮಳೆ ಬೀಳಲಿದೆ. ಅಕ್ಟೋಬರ್ 16, 17ರಂದು ಜಿಲ್ಲೆಯ ಕೆಲವೆಡೆ ಮಾತ್ರ ಮಳೆಯಾಗುವ ಲಕ್ಷಣಗಳಿವೆ ಎಂದು ಇಲಾಖೆ ತಿಳಿಸಿದೆ.