ಕಲಬುರಗಿ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹಾಗೂ ರೈತ, ದಲಿತ, ಕೃಷಿ ಕಾರ್ಮಿಕರ ಐಕ್ಯ ಸಂಘಟನೆಯ ನೇತೃತ್ವದಲ್ಲಿ ಬೆಳಗ್ಗೆ 6 ಗಂಟೆಗೆ ರಸ್ತೆಗಿಳಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆ ಹಿನ್ನೆಲೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಆಟೋ ಮತ್ತು ಇತರ ವಾಹನ ಸಂಚಾರ ವಿರಳವಾಗಿದ್ದವು.
ಬಳಿಕ ಪ್ರತಿಭಟನೆ ಕಾವು ಕಡಿಮೆಯಾಗಿತ್ತಿದ್ದಂತೆ ಬಸ್, ಆಟೋ ಖಾಸಗಿ ವಾಹನಗಳ ಸಂಚಾರ ಯಥಾಸ್ಥಿತಿಗೆ ಮರಳಿತು. ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದವು. ಪ್ರತಿಭಟನೆ ಮಾರ್ಗಮಧ್ಯೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು.
ರೈತ ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಗಂಜ್ ಪ್ರದೇಶದ ನಗರೇಶ್ವರ್ ಶಾಲೆಯಿಂದ ಜಗತ್ ವೃತ್ತದ ವರೆಗೆ ಟ್ರ್ಯಾಕ್ಟರ್ ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.