ಕಲಬುರಗಿ: ಪಾಳು ಬಿದ್ದಿರುವ ಶಹಾಬಾದ್ ಇಎಸ್‌ಐ ಆಸ್ಪತ್ರೆ ಆಧುನಿಕರಿಸಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮುಂದಾಗಿದ್ದಾರೆ.
ಸಚಿವ ನಿರಾಣಿ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಶಹಾಬಾದ್ ಪಟ್ಟಣದ ವಾಡಿ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿಸಲು ಅಗ್ರತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಬೆಳೆದು ನಿಂತಿರುವ ಗಿಡ-ಗಂಟೆಗಳು, ಬಿರುಕು ಬಿಟ್ಟಿರುವ ಗೋಡೆಗಳು, ಕೈಕೊಟ್ಟಿರುವ ವಿದ್ಯುತ್ ಸಂಪರ್ಕ, ಹಾಳಾಗಿರುವ ಬೆಡ್‍ಗಳು, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಸ್ನಾನದ ಕೋಣೆ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತಕ್ಕೆ ಸಚಿವರು ನಿರ್ದೇಶನ ನೀಡಿದ್ದಾರೆ.
ಸಚಿವರ ಸೂಚನೆ ಬೆನ್ನಲ್ಲೇ ಇಂದು ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಭಾನುವಾರ ಖುದ್ದು ಸಚಿವ ನಿರಾಣಿ ಅವರೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಿರುಪಯುಕ್ತವಾಗಿ ಬಿದ್ದಿದ್ದ ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾದರೆ ನೂರಾರು ಸೋಂಕಿತರಿಗೆ ಚಿಕಿತ್ಸೆ ಸಿಗಲಿದೆ.
ಆಸ್ಪತ್ರೆ ಹಿನ್ನೆಲೆ
1994ರಲ್ಲಿ ಶಹಾಬಾದ್ ಪಟ್ಟಣದಲ್ಲಿ ಕಾರ್ಮಿಕರಿಗಾಗಿಯೇ ಇಎಸ್‍ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿತ್ತು. ಪ್ರಾರಂಭದಲ್ಲಿ ಈ ಆಸ್ಪತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜಿಲ್ಲೆಯ ನಾನಾ ಭಾಗಗಳಿಂದ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ಜನಸಾಮಾನ್ಯರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ನುರಿತ ವೈದ್ಯರು ಉತ್ತಮ ಚಿಕಿತ್ಸೆ ಕೊಡುತ್ತಿದ್ದರಿಂದ ಇದೊಂದು ಉತ್ತಮ ಇಎಸ್‍ಐ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು.
ಆಸ್ಪತ್ರೆ ಸುತ್ತಮುತ್ತ ಸಿಮೆಂಟ್ ಫ್ಯಾಕ್ಟರಿಗಳು ಇದ್ದವು. ಕಾಲಕ್ರಮೇಣ ಈ ಕಾರ್ಖಾನೆಗಳು ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸ್ಥಳಾಂತರಗೊಂಡರೆ, ಇನ್ನೂ ಕೆಲವು ಕಾರ್ಖಾನೆಗಳು ಬೇರೆ ಬೇರೆ ಕಾರಣಗಳಿಂದ ಸ್ಥಗಿತಗೊಂಡವು. ಹೀಗೆ ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಈ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಕಾರ್ಮಿಕರು ಬರುವ ಸಂಖ್ಯೆ ಕಡಿಮೆಯಾಗುತ್ತ ಕೊನೆಗೊಂದು ದಿನ ಮುಚ್ಚುವ ಹಂತಕ್ಕೆ ಬಂದಿತು. ಈಗ ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಲು ಸಚಿವ ನಿರಾಣಿ ಮುಂದಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.