ಕಲಬುರಗಿ: ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮತ್ತು ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಿನಜಾವ 5 ಗಂಟೆ ಸುಮಾರಿಗೆ ಹುಮನಾಬಾದ್ ರಿಂಗ್ ರಸ್ತೆ ಬಳಿ ಅನುಮಾನಾಸ್ಪದವಾಗಿ ಬೈಕ್ನಲ್ಲಿ ತಿರುಗುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿ ತಾಲೂಕಿನ ಉಪಳಾಂವ ಗ್ರಾಮದ ಈಶ್ವರ, ಶಿವಕುಮಾರ್, ಚಂದ್ರಕಾಂತ ಮತ್ತು ರವಿ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 47,480 ರೂ. ನಗದು, 3 ಚೀಲ ತೊಗರಿ, 50 ಗ್ರಾಂ ಬೆಳ್ಳಿ ಆಭರಣ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಎರಡು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗುತ್ತಿದ್ದ ಖದೀಮರು, 6 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು. ರಿಂಗ್ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಸವಾರರನ್ನು ಸುಲಿಗೆ ಮಾಡುತ್ತಿದ್ದ ಖದೀಮರು, ಮನೆ, ದಾಲ್ ಮಿಲ್, ಕರೆಂಟ್ ವೈರ್ಗಳನ್ನು ಕಳ್ಳತನ ಮಾಡುತ್ತಿದ್ದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.