ಕಲಬುರಗಿ: ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮಗ್ರ ಪ್ರಸ್ತಾವನೆಯೊಂದನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಾಚ್ಯವಸ್ತು ಹಾಗೂ ಪ್ರವಾಸೋದ್ಯಮ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದ್ರು. ಕಲಬುರಗಿ ಸಮೀಪದ ಜಲಾಶಯಗಳಲ್ಲಿ ಜಲಕ್ರೀಡೆ, ಬೋಟಿಂಗ್ ಸೇರಿದಂತೆ ಪ್ರವಾಸಿ ತಾಣಗಳ ಅಭಿವೃದ್ಧಿಗೊಳಿಸಲು ಪ್ರಸ್ತಾವನೆ ಸಲ್ಲಿಸಿ, ಈ ಪೈಕಿ ಸರ್ಕಾರ ಯಾವ ಕೆಲಸ ಮಾಡಬೇಕು. ಖಾಸಗಿಯವರ ನಿರ್ವಹಣೆಗೆ ಯಾವ ಕೆಲಸ ವಹಿಸಬೇಕೆಂಬುದನ್ನು ತೀರ್ಮಾನ ಮಾಡೋಣ ಎಂದರು.
ಪ್ರವಾಸೋದ್ಯಮ ಇಲಾಖೆಯಲ್ಲಿ ನಿಗದಿತ ಸಮಯದಲ್ಲಿ ಕಾಮಗಾರಿ ನಡೆಸದ ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಮುಂದಿನ ಜನವರಿ ಅಂತ್ಯದೊಳಗೆ ಕಾಮಗಾರಿ ಮುಗಿಸದಿದ್ದರೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ತೊಗರಿ ಸೇರಿದಂತೆ ಈ ಭಾಗದ ಆಹಾರ ಪದಾರ್ಥಗಳ ಆಹಾರ ಮೇಳ ಆಯೋಜಿಸಲು ಕ್ರಮಕೈಗೊಳ್ಳಬೇಕು. ಮುಂದಿನ ಬಜೆಟ್‍ನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ರೈತರಿಂದ ಹೆಚ್ಚು ಹಣ ವಸೂಲಿ ಸಚಿವ ಸಿ.ಟಿ ರವಿ ಆಕ್ಷೇಪ:
ಕಬ್ಬು ಕಟಾವು ಮತ್ತು ಸಾಗಾಣೆ ಸಂಬಂಧ ರೈತರಿಂದ ಹೆಚ್ಚು ಹಣ ಪಡೆಯುತ್ತಿರುವುದಕ್ಕೆ ಸಿ.ಟಿ.ರವಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಈ ಸಂಬಂಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಖಾನೆ ಮಾಲೀಕರು, ಕಾರ್ಖಾನೆಯಿಂದ 100 ರಿಂದ 110 ಕಿಲೋ ಮೀಟರ್ ದೂರದಿಂದ ಕಬ್ಬು ಕಟಾವು ಮಾಡಿ ಸಾಗಣೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ದರ ಪಡೆಯಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು. ಕೂಡಲೇ ಈ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.